ನವದೆಹಲಿ: ದೆಹಲಿಗೆ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮೇಕೆದಾಟು ಸೇರಿದಂತೆ ರಾಜ್ಯದ ಬಾಕಿ ಉಳಿದಿರುವ ನೀರಾವರಿ ಯೋಜನೆಗಳಿಗೆ ಅನುಮತಿ ಸಂಬಂಧ ಸಮಾಲೋಚನೆ ನಡೆಸಿದರು. ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ, ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅತೀಕ್ ಉಪಸ್ಥಿತರಿದ್ದರು.
ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ನೆರೆಯ ತಮಿಳುನಾಡು ಸರ್ಕಾರ ಕ್ಯಾತೆ ತೆಗೆಯುತ್ತಲೇ ಬಂದಿದೆ. ಇತ್ತೀಚೆಗೆ ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿತ್ತು. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.