ಕೊಡಗು : ಮಡಿಕೇರಿಯ ಬಿಜೆಪಿ ಯುವ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣ ಸಂಬಂಧ ಕೂಲಂಕುಶವಾಗಿ ತನಿಖೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ಕೊಡಗಿನಲ್ಲಿ ಮಾತಾಡಿದ ಅವರು, ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದರು.
ವಿನಯ್ ಸೋಮಣ್ಣ ನನಗೆ ಕಾಂಗ್ರೆಸ್ನ ನಾಯಕರಿಂಧ ಒತ್ತಡ ಇದೆ ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿದ್ದು ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ ಪಾರದರ್ಶಕವಾಗಿ ನಡೆಯಬೇಕೆಂದು ಗೃಹಸಚಿವರಿಗೆ ಆಗ್ರಹಿಸುತ್ತೇನೆ ಎಂದರು.
ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ ಆತ್ಮಹತ್ಯೆ: ಪ್ರಕರಣದಲ್ಲಿ ವಿರಾಜಪೇಟೆ ಶಾಸಕ ಪೊನ್ನಣ್ಣ ಹೆಸರು ಥಳಕು!
ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಒತ್ತಡ ಉಂಟಾಗಲು ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುವೆನು. ಅವರು ಎಷ್ಟೇ ದೊಡ್ಡ ನಾಯಕರಾಗಿದ್ದರು ಸಹ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.