ನವದೆಹಲಿ: ಮೂರು ದಿನಗಳಿಂದ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಭೇಟಿ ಮಾಡುತ್ತಿದ್ದಾರೆ.
ನಿನ್ನೆಯಷ್ಟೇ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಸಿದ್ದರಾಮಯ್ಯ, ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಹಂಗಾಮ, ಖಾಲಿ ಇರುವ ವಿಶಧಾನಪರಿಷತ್ ಸ್ಥಾನಗಳಿಗೆ ನಾಮನಿರ್ದೇಶನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಹೈಕಮಾಂಡ್ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಅದರಲ್ಲೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ೫ ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಗಾಧಿ ಮೇಲೆ ಕಣ್ಣಿಟ್ಟಿರುವ ಹಲವು ನಾಯಕರು ಡಿಕೆಶಿ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ.
ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ
ಮತ್ತೊಂದೆಡೆ, ಅಸಮರ್ಥ ಸಚಿವರಿಗೆ ಕೊಕ್ ನೀಡಿ, ಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿರುವ ಶಾಸಕರಿಗೆ ಅವಕಾಶ ನೀಡುವ ಬಗ್ಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ, ಸದ್ಯಕ್ಕೆ ಸಂಪುಟ ವಿಸ್ತರಣೆಯಾಗಲೀ, ಪುನಾರಚನೆಯಾಗಲಿ ಮಾಡೋದು ಬೇಡ ಎಂಬ ಸಂದೇಶವನ್ನು ಹೈಕಮಾಂಡ್ ನೀಡಿದೆ ಎನ್ನಲಾಗಿದೆ.
ಸಿಎಂ, ಕೆಪಿಸಿಸಿ ಸ್ಥಾನ ಬದಲಾವಣೆ ಇಲ್ಲ ?
ರಾಜ್ಯ ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಬೆಂಕಿ ಆಗಾಗ ಹೊತ್ತಿಕೊಳ್ಳುತ್ತಲೇ ಇರುತ್ತದೆ. ಹೀಗಾಗಿ ಹಲವು ತಿಂಗಳ ಬಳಿಕ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಸದ್ಯಕ್ಕೆ ಸಿಎಂ ಸ್ಥಾನದ ಬದಲಾವಣೆಯಾಗಲಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿ.ಕೆ ಶಿವಕುಮಾರ್ ಬದಲಾವಣೆಯಾಗಲಿ ಬೇಡ. ಸದ್ಯಕ್ಕೆ ಸಂಪುಟ ವಿಸ್ತರಣೆಯೆಂಬ ಜೇನಗೂಡಿಗೆ ಕೈಹಾಕೋದು
ಬೇಡ ಎಂಬ ಸಂದೇಶವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಸದ್ಯಕ್ಕೆ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಕೆ ಶಿವಕುಮಾರ್ ಸೇಫ್ ಎನ್ನಲಾಗಿದೆ.