ಬೆಂಗಳೂರು: ನನ್ನ ಹೇಳಿಕೆಯನ್ನು ಬೇರೆಬೇರೆ ರೂಪಕ್ಕೆ ತೆಗೆದುಕೊಂಡು ಹೋಗಬೇಕಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್ನಲ್ಲಿ ಏ. 3ರಂದು ಮಧ್ಯರಾತ್ರಿ ಯುವತಿಯನ್ನು ಹಿಂಬಾಲಿಸಿ ಯುವಕನೊಬ್ಬ ಅನುಚಿತವಾಗಿ ವರ್ತಿಸಿದ್ದ. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಪರಮೇಶ್ವರ್ ದೊಡ್ಡ ನಗರದಲ್ಲಿ ಅಲ್ಲಿ ಇಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಎಂದು ಹೇಳಿದ್ದರು. ಈ ಹೇಳಿಕೆಗೆ ಭಾರೀ ಟೀಕೆ ವ್ಯಕ್ತವಾಗಿತ್ತು.
ಇನ್ನೂ ಈ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಒಂದು ವೇಳೆ ನನ್ನ ಹೇಳಿಕೆ ನಾಡಿನ ತಾಯಂದಿರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಅದಲ್ಲದೆ ನನ್ನ ಹೇಳಿಕೆಯನ್ನು ಬೇರೆಬೇರೆ ರೂಪಕ್ಕೆ ತೆಗೆದುಕೊಂಡು ಹೋಗಬೇಕಿಲ್ಲ. ಬಿಜೆಪಿಯವರು ಉದ್ದೇಶಪೂರ್ವಕವಾಗಿ ನನ್ನ ಹೇಳಿಕೆಯನ್ನು ರಾಜಕೀಯಕ್ಕೆ ಬಳಕೆ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.