ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕರ್ನಾಟಕದ ಒಳನಾಡು ಅಂದರೆ ವಿಜಯನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಕೋಲಾರದ ಮುಳಬಾಗಿಲು, ಬಂಗಾರಪೇಟೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಅಂತೆಯೇ ಚಿತ್ರದುರ್ಗದ ಹೊಳಲ್ಕೆರೆ, ಚಳ್ಳಕೆರೆ, ಹಿರಿಯೂರು ಮತ್ತು ಹೊಸದುರ್ಗದಲ್ಲಿ ಚದುರಿದಂತೆ ಮಳೆಯಾಗಲಿದ್ದು, ಚಿತ್ರದುರ್ಗ ನಗರದಲ್ಲಿ ಒಣಹವೆ ಮುಂದುವರೆಯಲಿದೆ ಎನ್ನಲಾಗಿದೆ. ಉಳಿದಂತೆ ಉತ್ತರ ಕರ್ನಾಟಕ ಗದಗ, ಕೊಪ್ಪಳ, ಬಳ್ಳಾರಿ, ಹಾವೇರಿ ಯಲ್ಲಿ ಸಾಧಾರಣ ಮಳೆ ಜೊತೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ಬೆಂಗಳೂರು ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಏಪ್ರಿಲ್ 30 ಮತ್ತು ಮೇ 01, 2025 ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.