ಚನ್ನಪಟ್ಟಣ, ಮೇ.5: “ಚನ್ನಪಟ್ಟಣದಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯ ನೆರವು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಭರವಸೆ ನೀಡಿದರು.
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿದ್ದರಾಮಯ್ಯ ಅವರು ಸೋಮವಾರ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಚನ್ನಪಟ್ಟಣ ತಾಲೂಕು ಕಚೇರಿ ಸಭಾಂಗಣದಲ್ಲಿ, ವಿಧಾನಸಭೆ ಕ್ಷೇತ್ರದ ವಿಶೇಷ ಅನುದಾನ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸುತ್ತಿದ್ದ ಡಿಸಿಎಂ ಅವರು ಜೂಮ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚನ್ನಪಟ್ಟಣ ಸ್ಟೇಡಿಯಂ ನಿರ್ಮಾಣ ಪ್ರಸ್ತಾಪ ಮಾಡಿದರು. ನೆರವು ನೀಡುವಂತೆ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಸಿಎಂ ಅವರು “ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು” ಎಂದರು.
ಚನ್ನಪಟ್ಟಣ ಉಪಚುನಾವಣೆಗೆ ಮುಂಚಿತವಾಗಿ ತಟ್ಟೆಕೆರೆಯ ಬಳಿ ಕ್ರೀಡಾಂಗಣಕ್ಕೆ ಶಿವಕುಮಾರ್ ಅವರು ಗುದ್ದಲಿ ಪೂಜೆ ನೆರವೇರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.