ಬೆಂಗಳೂರು ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಎ1 ಆರೋಪಿ ರನ್ಯಾ ಹಾಗೂ ಎ2 ಆರೋಪಿ ತರುಣ್ ಇಬ್ಬರಿಗೂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕಿದ್ರೂ ನಟಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಕಳ್ಳ ಸಾಗಾಣಿಕೆ 60 ದಿನ ಕಳೆದರೂ ಡಿಆರ್ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಬ್ಬರು ಶ್ಯೂರಿಟಿ, 2 ಲಕ್ಷ ರೂ. ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ಅಲ್ಲದೇ ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾದಂತೆ ಹಾಗೂ ದೇಶ ಬಿಟ್ಟು ಹೊರಗೆ ಹೋಗದಂತೆ ಸೂಚನೆ ನೀಡಿದೆ. ರನ್ಯಾರಾವ್ ಪರವಾಗಿ ವಕೀಲ ಗಿರೀಶ್ ವಾದ ಮಂಡಿಸಿದರು.
ರೂ. 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲ ಮಗಳು ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿತ್ತು.
ರನ್ಯಾ ರಾವ್ ಮತ್ತು ಪ್ರಕರಣದ ಇತರ ಇಬ್ಬರು ಆರೋಪಿಗಳು ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ಈ ಪ್ರಕರಣವನ್ನು ಡಿಆರ್ಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ.