ರೇಷ್ಮೆ ನಗರಿ ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಲಾಗಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಹೆಸರು ಬದಲಾವಣೆ ಮಾಡಲಾಗಿದೆ. ಡಿಕೆ ಶಿವಕುಮಾರ್ ಒತ್ತಾಸೆಯಂತೆ ರಾಮನಗರ ಜಿಲ್ಲೆಯನ್ನು ದಕ್ಷಿಣ ಜಿಲ್ಲೆಯಾಗಿ ಮರುನಾಕರಣ ಮಾಡಲಾಗಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್ ಅವರು, ‘ಜನರ ಅಪೇಕ್ಷೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ’ ಎಂದರು.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ರಾಮನಗರ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿಯೋಗ ಭೇಟಿಯಾಗಿತ್ತು. ಜಿಲ್ಲೆಯ ಅಭಿವೃದ್ದಿಯ ದೃಷ್ಟಿಯಿಂದ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿತ್ತು. ಇದೀಗ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಬಿಜೆಪಿ ನಾಯಕರು ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಸಂಪುಟದಲ್ಲಿ ಇದನ್ನು ಇಟ್ಟು ಒಪ್ಪಿಗೆ ಪಡೆದುಕೊಳ್ಳುವಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ.