ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಉಂಟಾಗುತ್ತಿರುವ ಮಳೆ ಹಾನಿ ಹಾಗೂ ಕೋವಿಡ್ ಸೋಂಕಿನ ಕುರಿತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಆರೋಗ್ಯ ಇಲಾಖೆ ಹಾಗೂ ವಿವಿಧ ಹಂತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮಂಡ್ಯದಲ್ಲಿ ವಾಹನ ತಪಾಸಣೆ ವೇಳೆ 3 ವರ್ಷದ ಮಗು ಸಾವು: ಪೋಷಕರಿಗೆ ಕೃಷಿ ಸಚಿವರಿಂದ ಸಾಂತ್ವನ!
ಪ್ರಸಕ್ತ ವರ್ಷ ಧಾರವಾಡ ಜಿಲ್ಲೆಯಲ್ಲಿ ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ 105 ಮಿಲಿ ಮೀಟರ್ ಮಳೆ ಆಗಬೇಕಿತ್ತು. ಆದರೆ, ಈಗ 217 ಮಿಲಿ ಮೀಟರ್ ಮಳೆಯಾಗಿದೆ. ಕೆಲವು ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಜಿಲ್ಲೆಯ ಬೆಣ್ಣಿ ಹಾಗೂ ತುಪ್ಪರಿ ಹಳ್ಳದಿಂದ ಹೆಚ್ಚಿನ ಹಾನಿಯಾಗುತ್ತದೆ. ಆ ಹಾನಿ ತಪ್ಪಿಸಲು ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು.
ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ಜೀವ ಹಾನಿಯಾಗಬಾರದು. ಹೆಸ್ಕಾಂ ಕೂಡ ಯಾವುದೇ ಅವಘಡ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸಿಡಿಲಿಗೆ ಇಬ್ಬರು ಜೀವ ಕಳೆದುಕೊಂಡಿದ್ದು, ನಾಲ್ಕು ಜಾನುವಾರುಗಳು ಅಸುನೀಗಿವೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
ಕೋವಿಡ್ ಹಿನ್ನೆಲೆಯಲ್ಲಿ ಜನ ಹೆಚ್ಚು ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಸೂಚಿಸಿದ ಮಾರ್ಗಸೂಚಿಗಳನ್ನು ಜನ ಪಾಲಿಸಬೇಕು. ಈಗಾಗಲೇ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯಾಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯ್ತಿ ಸಿಇಓ ಭುವನೇಶ ಪಾಟೀಲ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.