ಕನ್ನಡ ಭಾಷೆಯ ಮೂಲದ ಬಗ್ಗೆ ಕೆಣಕಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ಕಮಲ್ ಹಾಸನ್ ಸಿನಿಮಾ ಬಿಡುಗಡೆಗೆ ಸಂಕಷ್ಟ ಎದುರುರಾಗಿದೆ. ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮತ್ತು ಪ್ರದರ್ಶನ ಮಾಡಬಾರದು ಎಂದು ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ತಮ್ಮ ಸಿನಿಮಾ ತಡೆಯದಂತೆ ಕಮಲ್ ಕಾನೂನು ಮೊರೆ ಹೋಗಿದ್ದಾರೆ.
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿಕೊಂಡಿದೆ ಎಂದು ಕಮಲ್ ಹೇಳಿದ್ದಕ್ಕಾಗಿ ರಾಜ್ಯದಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಜೂನ್ 5 ರಂದು ಚಿಥಗ್ ಲೈಫ್ ಬಿಡುಗಡೆಯನ್ನು ಸ್ಥಗಿತಗೊಳಿಸುವಂತೆ ಹೋರಾಟ ನಡೆಯುತ್ತಿದ್ದು, ಈ ಬಗ್ಗೆ ಕಮಲ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ನಿರ್ಮಾಣ ಕಂಪನಿ ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ, ಕಮಲ್ ಹಾಸನ್, ಕರ್ನಾಟಕ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ ಮತ್ತು ಚಲನಚಿತ್ರ ವ್ಯಾಪಾರ ಸಂಸ್ಥೆಗಳು ಚಿತ್ರದ ಬಿಡುಗಡೆಗೆ ಅಡ್ಡಿಯಾಗದಂತೆ ನಿರ್ದೇಶಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಪ್ರದರ್ಶನಕ್ಕೆ ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಮಹಾನಿರ್ದೇಶಕರು ಮತ್ತು ನಗರ ಪೊಲೀಸ್ ಆಯುಕ್ತರಿಗೆ ಸೂಚನೆಗಳನ್ನು ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.