ಬೆಂಗಳೂರು: ಬೆಳೆಗಾರರನ್ನು ಬೆಲೆ ಕುಸಿತದಿಂದ ಪಾರು ಮಾಡುವ ಉದ್ದೇಶದಿಂದ ಅವರಿಗೆ ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ನಿರ್ಧರಿಸಲಾಗಿದೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಅತಿ ಹೆಚ್ಚು ಮಾವನ್ನು ಬೆಳೆಯುತ್ತಾರೆ. ಈ ಬಾರಿ ಮಾವು ಬೆಲೆ ತೀವ್ರ ಕುಸಿತ ಉಂಟಾಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಈ ರೈತರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?
ಕೋಲಾರದ ಮಾವು ಬೆಳೆಗಾರರೊಂದಿಗೆ ಸಭೆ ನಡೆಸಿ ಅವರ ಸಂಕಷ್ಟಗಳನ್ನು ಆಲಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಬೆಳೆಗಾರರ ನೆರವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಈ ಬೆಳೆಗಾರರನ್ನು ಬೆಲೆ ಕುಸಿತದಿಂದ ಪಾರು ಮಾಡುವ ಉದ್ದೇಶದಿಂದ ಅವರಿಗೆ ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ನಿರ್ಧರಿಸಲಾಗಿದೆ. ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ಅದರಲ್ಲೂ ಕೋಲಾರದಲ್ಲಿ ಬೆಳೆಯುತ್ತಿರುವ ತೋತಾಪುರಿ ಸೇರಿದಂತೆ ಇತರೆ ಮಾವು ಬೆಳೆ ಪ್ರವೇಶವನ್ನು ಆಂಧ್ರಪ್ರದೇಶ ಸರ್ಕಾರ ನಿರ್ಬಂಧಿಸಿರುವುದರಿಂದ ರೈತರು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ. ಈ ನಿರ್ಬಂಧವನ್ನು ತೆರವುಗೊಳಿಸುವಂತೆ ನಮ್ಮ ಮುಖ್ಯಮಂತ್ರಿಗಳು ಆಂಧ್ರಪ್ರದೇಶ ಮುಖ್ಯಮಂತ್ರಿಗಳಿಗೆ ಎರಡು ಬಾರಿ ಪತ್ರ ಬರೆದು ಮನವಿ ಮಾಡಿದ್ದರೂ ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಕಿಡಿಕಾರಿದರು.