ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಅನ್ನು ರದ್ದುಪಡಿಸುವಂತೆ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ನ ನ್ಯಾಯಮೂರ್ತಿ ಎಸ್ ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ವಾದ-ಪ್ರತಿವಾದವನ್ನು ಆಲಿಸಿ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ನಿಕಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ ಮತ್ತು ಶಮಂತ್ ಮಾವಿನಕೆರೆ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಸುಪ್ರೀಂ ಕೋರ್ಟ್ ಹಲವು ತೀರ್ಪುಗಳನ್ನು ಉಲ್ಲೇಖಿಸಿ, ಸೋಸಲೆ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ, ಅವರ ಪಾತ್ರ ಏನು ಎಂಬುದೇ ಗೊತ್ತಿಲ್ಲ. ಎಫ್ಐಆರ್ನಲ್ಲಿಯೂ ಅವರ ಹೆಸರು ಪ್ರಸ್ತಾಪಿಸಿಲ್ಲ. ಅರ್ಜಿದಾರರನ್ನು ಬಂಧಿಸಿರುವುದು ಕಾನೂನು ಬಾಹಿರವಾಗಿದ್ದರೆ ಅವರನ್ನು ಒಂದು ಕ್ಷಣವೂ ಜೈಲಿನಲ್ಲಿಡುವುದಕ್ಕೆ ಅವಕಾಶವಿಲ್ಲ ಎಂದು ವಾದ ಮಂಡಿಸಿದರು.
ಪ್ರಕರಣದಲ್ಲಿ ಅರ್ಜಿದಾರ ಸೋಸಲೆ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪ್ರತ್ಯೇಕ ತನಿಖಾ ಸಂಸ್ಥೆಯಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಸಿಸಿಬಿ ಅಧಿಕಾರ ಚಲಾಯಿಸಲಾಗುವುದಿಲ್ಲ. ಅವರನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿರುವುದು ಕಾನೂನು ಬಾಹಿರವಾಗಿದೆ ಎಂದು ಪೀಠಕ್ಕೆ ಹೇಳಿದರು.
ಈ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೇಳಿದರು. ಅಲ್ಲದೆ, ಪ್ರಕರಣ ಸಂಬಂಧಿಸಿದಂತೆ ಇಡೀ ರಾತ್ರಿ ಕೆಲಸ ಮಾಡಿದ್ದೇವೆ. ಎಲ್ಲ ದಾಖಲೆಗಳನ್ನು ಹಾಜರು ಪಡಿಸಲಾಗುವುದು. ಅದಕ್ಕೆ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಈ ಅಂಶ ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ನಾಳೆಗೆ ಮುಂದೂಡಿತು.