ಧಾರವಾಡ: ಧಾರವಾಡ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರು ಪುನರಾಯ್ಕೆಯಾಗಿದ್ದಾರೆ.
ಈ ಹಿಂದೆ ಕೂಡ ಚಂದ್ರಕಾಂತ ಬೆಲ್ಲದ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿ ಈ ಬಾರಿಯೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಬೆಲ್ಲದ ಅವರು 2,328 ಮತಗಳನ್ನು ಪಡೆದು ಗೆಲುವು ದಾಖಲಿಸಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಮೋಹನ ಲಿಂಬಿಕಾಯಿ ಅವರು 1,816 ಮತಗಳನ್ನ ಪಡೆದರೆ, ಹನುಮಾಕ್ಷಿ ಗೋಗಿ 204 ಹಾಗೂ ಚಂದ್ರಶೇಖರ ಅವರು 39 ಮತಗಳನ್ನು ಪಡೆದರು.
ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಬಣಗಳ ನಡುವೆ ತುರುಸಿನ ಚುನಾವಣಾ ಸ್ಪರ್ಧೆ ಏರ್ಪಟ್ಟಿತ್ತು. ಇದೀಗ ಈ ಚುನಾವಣೆಯಲ್ಲಿ ಬೆಲ್ಲದ ಬಣವೇ ಮೇಲುಗೈ ಸಾಧಿಸಿದೆ.
ಬೆಲ್ಲದ ಗೆಲುವು ದಾಖಲಿಸುತ್ತಿದ್ದಂತೆ ಅವರ ಬೆಂಬಲಿಗರು ಸಂಘದ ಎದುರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.