ಬೆಂಗಳೂರು ಗ್ರಾಮಾಂತರ : ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ, ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಬಳಿ ನಡೆದಿದೆ. ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಘಟನೆ ನಡೆದಿದೆ.
ಬೆಂಗಳೂರಿನಿಂದ ಹೊರನಾಡಿಗೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಸಂಚರಿಸುತ್ತಿತ್ತು. ಶಾಂತಿನಗರದಿಂದ ನೆಲಮಂಗಲ ನಗರಕ್ಕೆ ಬರುತ್ತಿದ್ದ ಆಟೋದಲ್ಲಿ ಒಂದೇ ಕುಟುಂಬದ 6 ಮಂದಿ ಬರುತ್ತಿದ್ದರು. ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಚಾಲಕ ಯೂಟರ್ನ್ ತೆಗೆದುಕೊಳ್ಳುವ ವೇಳೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಪುಟ್ಟಮ್ಮ (55), ಶ್ರೀನಿವಾಸ್ (40)ಮೃತರಾಗಿದ್ದು, ಲೇಖನ (11), ವರ್ಷಿಣಿ(13), ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ನಾಗರತ್ಮಮ್ಮ (35), ವೆಂಕಟೇಶ್ (37) ಸಣ್ಣಪುಟ್ಟಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.