ಮಂಡ್ಯ :- ಪೌರನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘವು ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿದ್ದು, ಎರಡನೇ ದಿನವು ಮದ್ದೂರು ಪುರಸಭೆ ಕಛೇರಿ ಮುಂಭಾಗ ಮುಷ್ಕರ ಮುಂದುವರೆದಿದೆ.
ಕರ್ನಾಟಕದಲ್ಲಿ ಭಾರೀ ಮಳೆ: ಶುಕ್ರವಾರ, ಶನಿವಾರ DC , CEO ಸಭೆ ಕರೆದ ಸಿಎಂ!
ಮದ್ದೂರು ಪುರಸಭೆ ಎದುರು ಪೌರ ನೌಕರರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಎರಡನೇ ದಿನದಂದು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಕುಮಾರ್ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.
ಎರಡನೇ ದಿನವು ಪುರಸಭೆಯ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ಮಾಡಲಿಲ್ಲ. ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿರುವುದನ್ನು ನೋಡಿ ಸಾರ್ವಜನಿಕರು ವಾಪಸ್ ಹೋಗುತ್ತಿದ್ದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ.
ಪೌರ ನೌಕರರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಿರ್ಣಯಗಳನ್ನು ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಮನವಿ ಸಲ್ಲಿಸಿ 45 ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರತಿಭಟನೆಯು ಅನಿವಾರ್ಯವಾಗಿದೆ ಎಂದು ಕಿಡಿಕಾರಿದರು.
* ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ, ಸೇರಿದಂತೆ ಸರ್ಕಾರಿ ನೌಕರಿ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.
* ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ್, ಕ್ಲೀನರ್ಸ್, ಗಾರ್ಡ್ನರ್, ಸ್ಯಾನಿಟರಿ ಸೂಪರವೈಸರ್, ಯುಜಿಡಿ ಸಹಾಯಕರು, ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು.
* ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಖಾಯಂ ಮಾಡುವುದು.
* ಎಲ್ಲಾ ನೌಕರರಿಗೆ ಎಸ್ ಎಫ್ ಸಿ ಮುಕ್ತ ನಿಧಿಯಿಂದ ವೇತನ ನೀಡುವುದು.
* ಈ ಎಲ್ಲಾ ಬೇಡಿಕೆಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಅನಿರ್ಧಿಷ್ಟಾವಧಿ ಮುಷ್ಕರ ಮಾಡುವ ಮೂಲಕ ಕಚೇರಿಗಾಗಲೀ ಅಥವಾ ಸ್ವಚ್ಛತೆಗಾಗಲಿ ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಕುಮಾರ್
ಪ್ರತಿಭಟನಾ ನಿರತರೊಂದಿಗೆ ಮಾತನಾಡಿ, ಕಳೆದೆರಡು ದಿನಗಳಿಂದ ಪಟ್ಟಣದಾದ್ಯಂತ ಪೌರ ನೌಕರರ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಪೌರ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಬೇಕು ಹಾಗೂ ಈ ಸಂಬಂಧ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ರಘು, ಜಿಲ್ಲಾ ಸಂಚಾಲಕ ಪುರುಷೋತ್ತಮ, ಕುಮಾರ್, ಬಾಬು, ಪುಟ್ಟಸ್ವಾಮಿ, ಶ್ರೀಧರ್ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ