ಬೆಂಗಳೂರು: ರಾಪಿಡೊ, ಉಬರ್, ಓಲಾ ಮುಂತಾದ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಬೈಕ್ ಟ್ಯಾಕ್ಸಿಗಳಿಗೆ ಸ್ಪಷ್ಟ ನಿಯಮಗಳನ್ನು ರಚಿಸಲು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಿತ್ತು.
ಇದೀಗ ಹೈಕೋರ್ಟ್‌ನ ಆದೇಶದ ಅನುಸಾರ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶಿಸಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅವರ ಹಲವು ವರ್ಷಗಳ ಹೋರಾಟಕ್ಕೆ ಗೆಲುವಾಗಿದೆ. ಆರು ವಾರಗಳ ನಂತರ ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ.
ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ ನೀಡಿತ್ತು.
1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 93 ರ ಅಡಿಯಲ್ಲಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆರು ವಾರಗಳ ಒಳಗೆ ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಲು ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿತ್ತು.
ಸಚಿವ ರಾಮಲಿಂಗಾ ರೆಡ್ಡಿ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದರು. ಅಗತ್ಯ ನಿಯಮಗಳನ್ನು ರೂಪಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ. ಅಪ್ಲಿಕೇಶನ್ ಆಧಾರಿತ ಪ್ಲಾಟ್‌ಫಾರ್ಮ್‌ಗಳಿಗೆ ನಿಯಮಗಳ ಕೊರತೆಯೂ ಬಳಕೆದಾರರಲ್ಲಿ ಅಸುರಕ್ಷತೆ ಹೆಚ್ಚಿಸಿದೆ ಎಂದು ಹೇಳಿದ್ದರು. ಸದ್ಯ ಹೈಕೋರ್ಟ್ ಆದೇಶ ಕಾರ್ಯಾಗತಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.