ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಡಿಸಿಎಂ ಡಿ.ಕೆ ಶಿವಕುಮಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೆಲ ಬಿಜೆಪಿ ನಾಯಕರಿದ್ದ ಸಭೆಗಳಲ್ಲಿ ಪಾಲ್ಗೊಂಡು ಭಾರಿ ಸದ್ದು ಮಾಡಿದ್ರು. ಇದೀಗ ಬೆಳಗಾವಿ ಸಾಹುಕಾರ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸರದಿ.
ಹೌದು, ರಾಜ್ಯ ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಜಟಾಪಟಿ ತಾರಕಕ್ಕೇರಿದ ದಿನಗಳಲ್ಲೇ ಡಿಸಿಎಂ ಡಿಕೆ ಶಿವಕುಮಾರ್, ದೆಹಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಲ್ಲದೆ, ಕಳೆದ ಶಿವರಾತ್ರಿಯಂದು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ತಮಿಳುನಾಡಿನ ಕೊಯಮತ್ತೂರಿನಲ್ಲಿ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಮಿತ್ ಶಾ ಜತೆ ವೇದಿಕೆ ಹಂಚಿಕೊಂಡಿದ್ದರು. ಈ ಮೂಲಕ ಪವರ್ ಶೇರಿಂಗ್ ಬಗ್ಗೆ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಆಪ್ತರಿಗೆ ಶಾಕ್ ಕೊಟ್ಟಿದ್ದರು.
ಈ ಬೆಳವಣಿಗೆಗಳ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ HD ಕುಮಾರಸ್ವಾಮಿ ಅವರನ್ನು ಸಂಸತ್ ಭವನದ ಕಚೇರಿಯಲ್ಲಿ ಭೇಟಿ ಮಾತುಕತೆ ನಡೆಸಿದ್ದಾರೆ.
ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸತೀಶ್ ಜಾರಕಿಹೊಳಿ ನಡೆ ಕಾಂಗ್ರೆಸ್ ಪಾಳೆಯದಲ್ಲಿ ಮತ್ತೆ ಚರ್ಚೆ ಹುಟ್ಟುಹಾಕಿದೆ. ಸಚಿವ ಕೆ.ಎನ್ ರಾಜಣ್ಣಗೆ ಹನಿಟ್ರ್ಯಾಪ್ ನಡೆಸಲು ಯತ್ನ ನಡೆದ ಬಗ್ಗೆ ಬಹಿರಂಗವಾಗಿಯೇ ಸತೀಶ್ ಜಾರಕಿಹೊಳಿ ಮಾತನಾಡಿ ಅಸಮಾಧಾನ ಹೊರಹಾಕುತ್ತಿದ್ದಾರೆ. ನಿನ್ನೆಯಷ್ಟೇ ಹೈಕಮಾಂಡ್ ನಾಯಕರನ್ನು ಭೇಟಿ ಮಾಡ ಹನಿಟ್ರ್ಯಾಪ್ ಬಗ್ಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಇದೀಗ ಡಿಸಿಎಂ ಡಿ.ಕೆ ಶಿವಕುಮಾರ್ ರಾಜಕೀಯ ಕಡು ವಿರೋಧಿ ಹೆಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿರೋದು ಹೊಸ ಚರ್ಚೆಗೆ ಗ್ರಾಸವಾಗಿದೆ..